ರಾಜ್ಯಾದ್ಯಂತ ಒಣಹವೆ–ಚಳಿ ಜೋರಾಗಿದೆ

ರಾಜ್ಯದಲ್ಲಿ ಒಣಹವೆ ಪ್ರಭಾವ ಇನ್ನೂ ಮುಂದುವರಿದಿದ್ದು, ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಕಳೆದ ಹಲವು ದಿನಗಳಿಂದ ಕಾಣಿಸಿಕೊಂಡಿರುವ ಒಣಹವೆ ಇಂದೂ ಮುಂದುವರಿಯುವ ಸಾಧ್ಯತೆ ಇದೆ.

ಇದೇ ರೀತಿ ದಕ್ಷಿಣ ಒಳನಾಡಿನ ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಶುಷ್ಕ ವಾತಾವರಣ ಮುಂದುವರಿಯಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಇತ್ತ ಬೆಂಗಳೂರಿನಲ್ಲಿ ಇಂದು ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್‌ ಹಾಗೂ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಚಳಿಯ ವಾತಾವರಣ ಹೆಚ್ಚಿರುವ ಹಿನ್ನೆಲೆಯಲ್ಲಿ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಬೆಚ್ಚಗಿನ ಉಡುಪು ಧರಿಸುವುದು, ಬಿಸಿ ಆಹಾರ ಸೇವನೆ ಮಾಡುವುದು ಹಾಗೂ ಸಮತೋಲನ ಆಹಾರಕ್ಕೆ ಆದ್ಯತೆ ನೀಡುವುದು ಆರೋಗ್ಯದ ದೃಷ್ಟಿಯಿಂದ ಅಗತ್ಯವೆಂದು ಸೂಚಿಸಲಾಗಿದೆ.

ಗಿಡಗಳು ಹೂಬಿಡುವ ಕಾಲ ಹಾಗೂ ದೂಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೋಲನ್‌ ಮತ್ತು ಡಸ್ಟ್‌ ಅಲರ್ಜಿ ಇರುವವರು ವಿಶೇಷ ಜಾಗ್ರತೆ ವಹಿಸಬೇಕು. ಚಳಿ–ಒಣಹವೆ ನಡುವೆಯೇ ಆರೋಗ್ಯ ಕಾಪಾಡಿಕೊಳ್ಳಲು ಸೂಕ್ತ ಮುನ್ನೆಚ್ಚರಿಕೆ ಅತ್ಯಾವಶ್ಯಕ ಎಂದು ಹವಾಮಾನ ಹಾಗೂ ಆರೋಗ್ಯ ತಜ್ಞರು ಹೇಳಿದ್ದಾರೆ.


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-02-03 11:21:45
No Reviews