“ರಾಜೀನಾಮೆ ಬಳಿಕ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಪ್ರಶಂಸೆ”

ನವದೆಹಲಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕರಿಗೆ ಮಾದರಿಯಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪಕ್ಷ ನೀಡಿದ ಭರವಸೆಯನ್ನು ಗೌರವಿಸುವ ಮೂಲಕ ಅವರು ತೋರಿಸಿದ ನಿಷ್ಠೆ ಮತ್ತು ಬದ್ಧತೆ ಶ್ಲಾಘನೀಯ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಶುಕ್ರವಾರ ದೆಹಲಿಯಲ್ಲಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಕರ್ನಾಟಕದ ನೂತನ ಸಚಿವ ಸಂಪುಟ ರಚನೆ ಹಾಗೂ ರಾಜಕೀಯ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆಗಳು ನಡೆದಿವೆ.

ರಾಹುಲ್ ಗಾಂಧಿ ಮಾತನಾಡಿ, “ಕುರ್ಚಿಗಿಂತ ಪಕ್ಷದ ಭರವಸೆ ಮತ್ತು ಸಿದ್ಧಾಂತ ಮುಖ್ಯ ಎಂದು ತೋರಿಸಿದ ನೀವು ಕಾಂಗ್ರೆಸ್ ನಾಯಕರಿಗೆ ನಿಜವಾದ ಮಾದರಿ” ಎಂದು ಸಿದ್ದರಾಮಯ್ಯ ಅವರನ್ನು ಶ್ಲಾಘಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇದೇ ವೇಳೆ ಸಂಪುಟ ರಚನೆ, ಸಮುದಾಯ ಸಮತೋಲನ ಮತ್ತು ಪ್ರಮುಖ ಖಾತೆಗಳ ಹಂಚಿಕೆ ಕುರಿತು ಸಿದ್ದರಾಮಯ್ಯ ಅವರು ಹೈಕಮಾಂಡ್ ಜೊತೆ ಚರ್ಚೆ ನಡೆಸಿದ್ದಾರೆ. ಎಲ್ಲಾ ಪ್ರಮುಖ ಸಮುದಾಯಗಳಿಗೆ ಸಮರ್ಪಕ ಪ್ರಾತಿನಿಧ್ಯ ನೀಡಬೇಕು ಎಂಬ ಅಭಿಪ್ರಾಯವನ್ನು ಅವರು ಮುಂದಿಟ್ಟಿದ್ದಾರೆ ಎನ್ನಲಾಗಿದೆ.

ಉಪಮುಖ್ಯಮಂತ್ರಿ ಹುದ್ದೆ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಹಾಗೂ ಲಿಂಗಾಯತ ಸಮುದಾಯಗಳಿಗೆ ಪ್ರತಿನಿಧಿತ್ವ ನೀಡುವಂತೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಜೊತೆಗೆ ರಾಜ್ಯಸಭೆ ಮತ್ತು ಎಂಎಲ್‌ಸಿ ನೇಮಕಾತಿ ಕುರಿತಾದ ಪಟ್ಟಿಗಳನ್ನೂ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ, ತಮ್ಮ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸರ್ಕಾರದಲ್ಲಿ ಪ್ರಮುಖ ಖಾತೆ ನೀಡುವ ಬಗ್ಗೆ ಸಹ ಚರ್ಚೆ ನಡೆದಿದ್ದು, ಹೈಕಮಾಂಡ್ ಈ ಕುರಿತು ಪರಿಗಣಿಸುವ ಭರವಸೆ ನೀಡಿದೆ ಎನ್ನಲಾಗಿದೆ.

ಇದರೊಂದಿಗೆ, ಜೂನ್ 3ರಂದು ನಡೆಯಲಿರುವ ನೂತನ ಮುಖ್ಯಮಂತ್ರಿ ಪ್ರಮಾಣವಚನ ಸಮಾರಂಭಕ್ಕೂ ಮುನ್ನ ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ಮತ್ತಷ್ಟು ವೇಗ ಪಡೆದಿವೆ.


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-05-30 15:51:00
No Reviews