ಚಿನ್ನಸ್ವಾಮಿಯಲ್ಲಿ ಐಪಿಎಲ್‌ಗೆ ಗ್ರೀನ್ ಸಿಗ್ನಲ್

ಈ ಸಂಬಂಧ ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಡಿಜಿ-ಐಜಿಪಿ ಡಾ. ಎಂ.ಎ. ಸಲೀಂ, ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಎಸಿಎಸ್ ತುಷಾರ್ ಗಿರಿನಾಥ್, ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್ ಸೇರಿದಂತೆ ಹಲವಾರು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಒಟ್ಟು 7 ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಸರ್ಕಾರ ಒಪ್ಪಿಗೆ ನೀಡಿದೆ.

ಈ ನಿರ್ಧಾರದಿಂದ ಬೆಂಗಳೂರಿನಲ್ಲಿ ಆರ್‌ಸಿಬಿ ತಂಡದ ಐದು ಲೀಗ್ ಪಂದ್ಯಗಳು, ಒಂದು ಪ್ಲೇ-ಆಫ್ ಪಂದ್ಯ ಹಾಗೂ ಹೈವೋಲ್ಟೇಜ್ ಫೈನಲ್ ಪಂದ್ಯ ನಡೆಯಲಿದೆ. ಪಂದ್ಯಗಳ ವೇಳಾಪಟ್ಟಿಗೆ ಅನುಗುಣವಾಗಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕ್ರೀಡಾಂಗಣದ ಸುತ್ತಮುತ್ತ ಹೆಚ್ಚುವರಿ ಪೊಲೀಸ್ ನಿಯೋಜನೆ ಮಾಡಿ ಬಿಗಿ ಭದ್ರತೆ ಒದಗಿಸುವುದರ ಜೊತೆಗೆ, ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಪ್ರೇಕ್ಷಕರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಕೂಡ ಆದ್ಯತೆ ನೀಡಲಾಗಿದೆ.

ಇದಲ್ಲದೆ 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಮಾರ್ಚ್ 28ರಿಂದ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಈ ನಿರ್ಧಾರ ಆರ್‌ಸಿಬಿ ಅಭಿಮಾನಿಗಳಿಗೆ ದೊಡ್ಡ ಸಿಹಿ ಸುದ್ದಿಯಾಗಿದೆ.


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-03-16 13:30:27
No Reviews