ನೈಜ ಪ್ರೇಮಿಗೆ ವಿಕೃತಿ ಬೇಡ: ಪ್ರೇಯಸಿಯ ಸಂಗ ವಿಡಿಯೋ ಪ್ರಕರಣಕ್ಕೆ ಹೈಕೋರ್ಟ್ ಕಠಿಣ ಕ್ಲಾಸ್!

ಪ್ರಿಯಕರನೊಬ್ಬ ತನ್ನ ಪ್ರೇಯಸಿಯೊಂದಿಗೆ ಕಳೆದ ಖಾಸಗಿ ಕ್ಷಣಗಳನ್ನು ವಿಡಿಯೋ ಮಾಡಿ, ಅದನ್ನು ತೋರಿಸಿ ಮರುಮರು ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಆರೋಪ ಎದುರಿಸುತ್ತಿದ್ದಾನೆ. ಈ ಸಂಬಂಧ ದಾಖಲಾಗಿದ್ದ ಪೊಲೀಸ್‌ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಆರೋಪಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ. ಆದರೆ, ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ನೀಡಲು ಸ್ಪಷ್ಟ ನಿರಾಕರಣೆ ಮಾಡಿದೆ.

ಪ್ರಕರಣ ಹಿನ್ನೆಲೆ:
ಆರೋಪಿಯು ಬ್ಲ್ಯಾಕ್‌ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತೆ 2025ರ ಮಾರ್ಚ್‌ 11ರಂದು ಪೊಲೀಸರಿಗೆ ದೂರು ನೀಡಿದ್ದರು. ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ತಿರಸ್ಕರಿಸಿದ ಬಳಿಕ ಆರೋಪಿ ಹೈಕೋರ್ಟ್ ಮೆಟ್ಟಿಲೇರಿದ್ದ. ತನಿಖೆ ಪೂರ್ಣಗೊಳಿಸಿದ ಪೊಲೀಸರು ಆರೋಪಪಟ್ಟಿಯನ್ನೂ ಸಲ್ಲಿಸಿದ್ದಾರೆ.

ಆರೋಪಿ ತಲೆಮರೆಸಿಕೊಂಡಿರುವ ಸ್ಥಿತಿಯಲ್ಲಿ ತಾನು ಕಾನೂನು ಪಾಲಕನೆಂದು ಹೇಳಿಕೊಂಡಿರುವುದನ್ನು ನ್ಯಾಯಪೀಠ ತಿರಸ್ಕರಿಸಿ, ತಲೆಮರೆಸಿಕೊಂಡಿರುವ ವ್ಯಕ್ತಿಗೆ ನಿರೀಕ್ಷಣಾ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಲಭ್ಯವಿರುವ ದಾಖಲೆಗಳು ಮತ್ತು ತನಿಖಾ ಮಾಹಿತಿ ಪರಿಶೀಲಿಸಿದ ಬಳಿಕ ಜಾಮೀನು ಅರ್ಜಿಯನ್ನು ಪುರಸ್ಕರಿಸುವ ಅಗತ್ಯವಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಪ್ರೇಮದ ನೆಪದಲ್ಲಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ವ್ಯಕ್ತಿಗೆ ನಿರೀಕ್ಷಣಾ ಜಾಮೀನು ನಿರಾಕರಿಸಿ, ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರಿದ್ದ ಏಕಸದಸ್ಯ ಪೀಠ ಈ ಮಹತ್ವದ ಆದೇಶ ಹೊರಡಿಸಿದೆ.


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-02-06 16:14:30
No Reviews