ಕರ್ನಾಟಕದಲ್ಲಿ 4 ದಿನ ಭಾರಿ ಮಳೆ: 14 ಜಿಲ್ಲೆಗಳಿಗೆ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಮತ್ತಷ್ಟು ತೀವ್ರಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಜೂನ್ 14ರವರೆಗೆ ಹಲವೆಡೆ ಹಗುರದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗುಡುಗು–ಸಿಡಿಲು ಸಹಿತ ಗಾಳಿಯೊಂದಿಗೆ ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚಿನ ಪರಿಣಾಮ ಕಾಣಬಹುದು.

ಕಳೆದ 24 ಗಂಟೆಗಳಲ್ಲಿ ಉಡುಪಿ ಜಿಲ್ಲೆಯಲ್ಲಿ 71.5 ಮಿಮೀ ಮಳೆ ದಾಖಲಾಗಿದ್ದು, ಕಾರ್ಕಳ, ಮಾಳ, ಮಡಿಕೇರಿ ಹಾಗೂ ದಕ್ಷಿಣ ಕನ್ನಡದ ಪಡುಮಾರ್ನಾಡು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ.

ತುಮಕೂರು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಭಾಗಗಳಲ್ಲೂ ಉತ್ತಮ ಮಳೆ ದಾಖಲಾಗಿದ್ದು, ಹಲವು ಜಿಲ್ಲೆಗಳಲ್ಲಿ ಮಳೆ ಚಟುವಟಿಕೆ ಜೋರಾಗಿದೆ.

ಇಂದು ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ವಿಜಯನಗರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ನಾಳೆ (ಜೂನ್ 12) ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಅತಿ ಭಾರಿ ಮಳೆಯ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಜಾರಿಯಲ್ಲಿದೆ.

ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಗದಗ, ರಾಯಚೂರು, ಹಾಸನ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ಹಾವೇರಿ, ವಿಜಯಪುರ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರಿಯಲಿದೆ.

ಗಂಟೆಗೆ 30–40 ಕಿ.ಮೀ ವೇಗದ ಗಾಳಿಯ ಸಾಧ್ಯತೆ ಇದ್ದು, ಕರಾವಳಿ ಭಾಗದ ಜನರು ಹೆಚ್ಚಿನ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-06-11 11:44:35
No Reviews