ಮಲೆ ಮಹದೇಶ್ವರಬೆಟ್ಟ ಪಾದಯಾತ್ರೆಗೆ ಹೊಸ ನಿಯಮ!

ಚಾಮರಾಜನಗರ, ಜನವರಿ 23:
ಮಲೆ ಮಹದೇಶ್ವರಬೆಟ್ಟದಲ್ಲಿ ಚಿರತೆ ದಾಳಿಯಿಂದ ಭಕ್ತ ಪ್ರವೀಣ್ ಸಾವನ್ನಪ್ಪಿದ ಘಟನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ. ಭಕ್ತರ ಸುರಕ್ಷತೆ ದೃಷ್ಟಿಯಿಂದ ಇನ್ನು ಮುಂದೆ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಪಾದಯಾತ್ರೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ.

ಹನೂರು ತಾಲೂಕಿನ ಮಲೆ ಮಹದೇಶ್ವರಬೆಟ್ಟದಲ್ಲಿ ಕಾಡುಪ್ರಾಣಿಗಳ ಉಪಟಳ ಹೆಚ್ಚಿರುವ ಹಿನ್ನೆಲೆ, ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾತ್ರಿ ವೇಳೆಯಲ್ಲಿ ಪಾದಯಾತ್ರೆ ನಡೆಸುವುದರಿಂದ ಅಪಾಯ ಹೆಚ್ಚಿರುವುದರಿಂದ ನಿರ್ಬಂಧ ಅನಿವಾರ್ಯ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

ಘಟನೆ ಹಿನ್ನೆಲೆ

ಇತ್ತೀಚೆಗೆ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ಮುಖ್ಯರಸ್ತೆ ಬಳಿ ಚಿರತೆ ಕಾಣಿಸಿಕೊಂಡಿತ್ತು. ಈ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದ್ದರೂ ಅಗತ್ಯ ಕ್ರಮ ಕೈಗೊಳ್ಳಲಾಗಿರಲಿಲ್ಲ ಎನ್ನಲಾಗಿದೆ. ಇದರ ಪರಿಣಾಮವಾಗಿ ಮಂಡ್ಯ ಜಿಲ್ಲೆಯ ಚೀರನಹಳ್ಳಿ ಮೂಲದ ಭಕ್ತ ಪ್ರವೀಣ್ ಚಿರತೆ ದಾಳಿಗೆ ಬಲಿಯಾಗಿದ್ದಾರೆ.

ಜನವರಿ 21ರ ಮುಂಜಾನೆ ಪಾದಯಾತ್ರೆ ವೇಳೆ ರಂಗಸ್ವಾಮಿ ದಿಬ್ಬದ ಬಳಿ ಚಿರತೆ ದಾಳಿ ನಡೆಸಿದ್ದು, ಪ್ರವೀಣ್ ಅವರನ್ನು ಕಾಡಿನೊಳಕ್ಕೆ ಎಳೆದುಕೊಂಡು ಹೋಗಿತ್ತು. ಮೊಬೈಲ್ ನೆಟ್ವರ್ಕ್ ಇಲ್ಲದ ಕಾರಣ ತಕ್ಷಣ ಮಾಹಿತಿ ನೀಡಲು ಸಾಧ್ಯವಾಗಿರಲಿಲ್ಲ. ನಂತರ ಪೊಲೀಸರು ಮತ್ತು ಅರಣ್ಯ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಮೃತದೇಹ ಪತ್ತೆ ಮಾಡಿದ್ದಾರೆ.

ಘಟನೆ ಬಳಿಕ ಭಕ್ತರ ಸುರಕ್ಷತೆಗಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಹೊಸ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-01-23 16:43:42
No Reviews