ಫೆ.9ರಂದು ಮೆಟ್ರೋ ಟಿಕೆಟ್‌ ದರ ಏರಿಕೆ ಇಲ್ಲ

ಬೆಂಗಳೂರು ಮೆಟ್ರೋ ದರ ಏರಿಕೆ ವಿಚಾರದಲ್ಲಿ ತಕ್ಷಣದ ಮಧ್ಯಪ್ರವೇಶಕ್ಕೆ ಮನವಿ ಮಾಡಿದ್ದಾಗಿ ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಈಗಾಗಲೇ ದೇಶದಲ್ಲೇ ದುಬಾರಿ ಮೆಟ್ರೋ ದರಗಳನ್ನು ಹೊಂದಿರುವ ಬೆಂಗಳೂರಿನಲ್ಲಿ ಮತ್ತೊಂದು ಹೆಚ್ಚಳವು ಲಕ್ಷಾಂತರ ನಾಗರಿಕರಿಗೆ ಸಾರ್ವಜನಿಕ ಸಾರಿಗೆಯನ್ನು ಅಸಾಧ್ಯಗೊಳಿಸಲಿದೆ ಎಂದು ಅವರು ಕೇಂದ್ರದ ಗಮನ ಸೆಳೆದಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಅವರು ಪ್ರಸ್ತಾವಿತ ದರ ಏರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಸೂಚಿಸಿದ್ದು, ಫೆಬ್ರವರಿ 9ರಿಂದ ಹೊಸ ದರಗಳು ಜಾರಿಗೆ ಬರುವುದಿಲ್ಲ ಎಂದು ತೇಜಸ್ವಿ ಸೂರ್ಯ ಸ್ಪಷ್ಟಪಡಿಸಿದ್ದಾರೆ. ಪ್ರಯಾಣಿಕರ ಅನುಕೂಲಕ್ಕೆ ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ ಎಂಬ ಸಂದೇಶವನ್ನೂ ಅವರು ಹಂಚಿಕೊಂಡಿದ್ದಾರೆ.

ಇದರ ನಡುವೆ ಬಿಎಂಆರ್‌ಸಿಎಲ್ ಹಿರಿಯ ಅಧಿಕಾರಿಗಳು, ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಅಧಿಕೃತ ಸೂಚನೆ ಇನ್ನೂ ಬಂದಿಲ್ಲ; ಸರ್ಕಾರದಿಂದ ಸ್ಪಷ್ಟ ಮಾಹಿತಿ ಬಂದ ಬಳಿಕವೇ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. ಇತ್ತೀಚೆಗೆ ನಿರ್ವಹಣಾ ವೆಚ್ಚ ಹೆಚ್ಚಳದ ನೆಪದಲ್ಲಿ ಮೆಟ್ರೋ ಪ್ರಯಾಣ ದರವನ್ನು ಶೇ.5ರಷ್ಟು ಹೆಚ್ಚಿಸಲು ನಿರ್ಧಾರ ಕೈಗೊಳ್ಳಲಾಗಿದ್ದು, ಇದರಿಂದ ಪ್ರಯಾಣಿಕರಲ್ಲಿ ತೀವ್ರ ಅಸಮಾಧಾನ ಮೂಡಿತ್ತು. ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ರಾಜಕೀಯ ವಾಗ್ದಾಳಿಗೂ ಈ ದರ ಏರಿಕೆ ಕಾರಣವಾಗಿತ್ತು. ಈಗ ತೇಜಸ್ವಿ ಸೂರ್ಯ ಅವರ ಮಧ್ಯಪ್ರವೇಶದಿಂದ ಪ್ರಯಾಣಿಕರಿಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದ್ದು, ಈ ನಿರ್ಧಾರ ಎಷ್ಟು ದಿನ ಮುಂದುವರಿಯಲಿದೆ ಎಂಬುದನ್ನು ಕಾದು ನೋಡಬೇಕಿದೆ.


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-02-07 18:23:25
No Reviews