ರಾಜ್ಯದಲ್ಲಿ ಮತ್ತೆ ಮುಂಗಾರು ಅಬ್ಬರ; ಐದು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳಿಂದ ಕಡಿಮೆಯಾಗಿದ್ದ ಮಳೆಯ ಪ್ರಮಾಣ ಮತ್ತೆ ಏರಿಕೆಯಾಗುವ ಸಾಧ್ಯತೆಯಿದೆ. ಇಂದು ಹಲವೆಡೆ ಮಳೆಯ ಆರ್ಭಟ ಮುಂದುವರಿಯಲಿದ್ದು, ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಮುಂಗಾರು ಮತ್ತಷ್ಟು ಸಕ್ರಿಯವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಳಗಾವಿ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಈ ಭಾಗಗಳಲ್ಲಿ ಗಂಟೆಗೆ 30ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ ಹಾಗೂ ರಾಮನಗರ ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ನೀಡಲಾಗಿದೆ. ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಕೊಪ್ಪಳ, ಬಾಗಲಕೋಟೆ, ರಾಯಚೂರು ಮತ್ತು ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ನಗರದ ಕೆಲವೆಡೆ ತುಂತುರುದಿಂದ ಸಾಧಾರಣ ಮಳೆಯಾಗಬಹುದು. ಜೊತೆಗೆ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

ಇನ್ನು ರಾಜ್ಯದ ಜಲಾಶಯಗಳಲ್ಲೂ ನೀರಿನ ಒಳಹರಿವು ಹೆಚ್ಚಾಗಿದ್ದು, ಕಬಿನಿ, ಹಾರಂಗಿ, ಆಲಮಟ್ಟಿ ಮತ್ತು ಹಿಡಕಲ್ ಜಲಾಶಯಗಳು ಬಹುತೇಕ ಭರ್ತಿಯಾಗಿವೆ. ಆಗಸ್ಟ್ 11ರ ಅಂಕಿಅಂಶದಂತೆ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಟ್ಟು 373.869 ಟಿಎಂಸಿ ನೀರು ಸಂಗ್ರಹವಾಗಿದ್ದು, ಒಟ್ಟಾರೆ ಸಾಮರ್ಥ್ಯದ ಶೇ.70.24ರಷ್ಟು ನೀರು ಲಭ್ಯವಿದೆ.


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-08-13 10:15:59
No Reviews