ಅಯ್ಯಪ್ಪ ದೇಗುಲ ಚಿನ್ನ ಕಳವು ಶಾಕ್! ಬೆಂಗಳೂರು ಸೇರಿ 21 ಸ್ಥಳಗಳಲ್ಲಿ ಇಡಿ ದಾಳಿ

ಚಿನ್ನ ಕಳವು ಪ್ರಕರಣದಲ್ಲಿ ಬಳ್ಳಾರಿಯ ಚಿನ್ನದ ವ್ಯಾಪಾರಿ ಗೋವರ್ಧನ್ ಪಾತ್ರ ಪ್ರಮುಖವಾಗಿದೆ ಎನ್ನಲಾಗಿದ್ದು, ಮುಖ್ಯ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ ದೇಗುಲದಿಂದ ಕಳವು ಮಾಡಿದ ಚಿನ್ನವನ್ನು ಅವರಿಗೆ ಮಾರಾಟ ಮಾಡಿದ್ದಾನೆ ಎಂಬ ಗಂಭೀರ ಆರೋಪ ಎದುರಾಗಿದೆ. ಅಕ್ರಮವಾಗಿ 470 ಗ್ರಾಂ ಚಿನ್ನ ಖರೀದಿಸಿದ್ದ ಆರೋಪದಡಿ ಕೇರಳ ಎಸ್‌ಐಟಿ ಈಗಾಗಲೇ ಗೋವರ್ಧನ್‌ನನ್ನು ಬಂಧಿಸಿದೆ.

2019ರಲ್ಲಿ ಶಬರಿಮಲೆ ದೇಗುಲದ ದ್ವಾರಪಾಲಕ ವಿಗ್ರಹಗಳಿಗೆ ಚಿನ್ನದ ಲೇಪನ ಮಾಡುವ ವೇಳೆ ಸುಮಾರು 4.5 ಕೆಜಿ ಚಿನ್ನ ನಾಪತ್ತೆಯಾಗಿದ್ದು, ಈ ಪ್ರಕರಣದ ತನಿಖೆಗೆ ಕೇರಳ ಹೈಕೋರ್ಟ್ ಆದೇಶಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಶಬರಿಮಲೆಯ ಮಾಜಿ ಮುಖ್ಯ ಅರ್ಚಕ ತಂತ್ರಿ ಕಂದರಾರು ರಾಜೀವ್, ತಿರುವಾಂಕೂರು ದೇವಸ್ವಂ ಮಂಡಳಿಯ ಮಾಜಿ ಅಧ್ಯಕ್ಷರು ಸೇರಿದಂತೆ 12ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಲಾಗಿದೆ.

ಏನಿದು ಪ್ರಕರಣ?
ಶಬರಿಮಲೆ ದೇಗುಲದ ದ್ವಾರಪಾಲಕ ವಿಗ್ರಹಗಳ ಮೇಲಿನ ಚಿನ್ನದ ಹೊದಿಕೆ ಹಾಗೂ ಶ್ರೀಕೋವಿಲ್‌ ಗರ್ಭಗುಡಿ ಬಾಗಿಲಿನ ಚೌಕಟ್ಟುಗಳಿಂದ ಚಿನ್ನ ಕಳ್ಳತನವಾಗಿದೆ ಎಂಬ ಆರೋಪ ಕೇಳಿಬಂದಿದೆ. ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡದ ಕಾರ್ಯವೈಖರಿಯ ಬಗ್ಗೆ ಕೇರಳ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕೆಲ ಆರೋಪಿಗಳನ್ನು ರಕ್ಷಿಸಲು ಉದ್ದೇಶಪೂರ್ವಕ ಪ್ರಯತ್ನಗಳು ನಡೆದಿರುವ ಅನುಮಾನವೂ ವ್ಯಕ್ತವಾಗಿದೆ. ಅಯ್ಯಪ್ಪ ಸ್ವಾಮಿ ದೇಗುಲದ ಕಲಾಕೃತಿಗಳ ಚಿನ್ನದ ದುರುಪಯೋಗ, ಅಧಿಕಾರಿಗಳ ಪಾತ್ರ ಹಾಗೂ ಆಡಳಿತಾತ್ಮಕ ತಪ್ಪುಗಳ ಬಗ್ಗೆ ಸಮಗ್ರ ತನಿಖೆ ಮುಂದುವರಿದಿದೆ.


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-01-20 10:49:33
No Reviews